ದೇವದುರ್ಗ:
ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದ್ದು, ಈ ಸಂಬಂಧ ರಾಜ್ಯ ಸರ್ಕಾರ ಈಗಾಗಲೇ ತನ್ನ ಶಿಫಾರಸ್ಸನ್ನು ಕೇಂದ್ರಕ್ಕೆ ಸಲ್ಲಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಾತಿಗಣತಿ ವರದಿ ಇನ್ನೊಂದು ತಿಂಗಳ ಅವಧಿಯಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ ಚರ್ಚೆಯ ನಂತರ ಅದನ್ನು ಅಂಗೀಕರಿಸಿ ಜಾರಿಗೊಳಿಸಲಾಗುವುದು ಎಂದರು.
ಅವರು ದೇವದುರ್ಗದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ – ತಿಂಥಣಿ ಬ್ರಿಡ್ಜ್ ವತಿಯಿಂದ ಆಯೋಜಿಸಲಾದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕನಕಗುರುಪೀಠ ಜಾತ್ಯಾತೀತ ಪೀಠ
ರಾಜ್ಯದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕಾರ್ಯನಿರ್ವಹಿಸುತ್ತಿದ್ದು, ಗುರುಪೀಠದಲ್ಲಿ ಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಶಿಕ್ಷಣ, ಆಧ್ಯಾತ್ಮ ಮತ್ತು ಜಾತ್ಯತೀತ ಮನೋಭಾವಕ್ಕೆ ಹೆಚ್ಚಿನ ಒತ್ತು ನೀಡಿದ್ದರು ಎಂದು ಸಿಎಂ ಸ್ಮರಿಸಿದರು.
ಕುರುಬ ಸಮುದಾಯಕ್ಕೆ ಮೊದಲ ಬಾರಿಗೆ ಕಾಗಿನೆಲೆ ಗುರುಪೀಠವನ್ನು 1992ರಲ್ಲಿ ಸ್ಥಾಪಿಸಲಾಗಿದ್ದು, ಶ್ರೀ ತಾರಕಾನಂದ ಸ್ವಾಮೀಜಿಯವರು ಅದರ ಮೊದಲ ಗುರುಗಳಾಗಿದ್ದರು. ಕಲ್ಯಾಣ ಕರ್ನಾಟಕ, ಬೆಂಗಳೂರು, ಮೈಸೂರು, ಮುಂಬಯಿ–ಕರ್ನಾಟಕ ಸೇರಿದಂತೆ ವಿವಿಧ ವಿಭಾಗಗಳನ್ನು ಹೊಂದಿರುವ ಈ ಗುರುಪೀಠದಲ್ಲಿ ಪ್ರತ್ಯೇಕ ಗುರುಗಳಿದ್ದು, ಈ ವಿಭಾಗಕ್ಕೆ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಗುರುಗಳಾಗಿ ಸೇವೆ ಸಲ್ಲಿಸಿದ್ದರು ಎಂದರು.
ಸಮಸಮಾಜ ನಿರ್ಮಾಣವೇ ಗುರಿ
ಕಾಗಿನೆಲೆ ಗುರುಪೀಠದ ಸ್ಥಾಪನೆಯ ಮೂಲ ಉದ್ದೇಶವೇ ಸಮಸಮಾಜ ನಿರ್ಮಾಣವಾಗಿದೆ. ಶ್ರೀಗಳ ಆತ್ಮಕ್ಕೆ ಶಾಂತಿ ಕೋರಿ, ಅವರ ಕುಟುಂಬ ವರ್ಗ ಹಾಗೂ ಇಡೀ ಸಮಾಜಕ್ಕೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಹೇಳಿದರು.
ಕನಕದಾಸರು ‘ಕುಲ ಕುಲವೆಂದು ಹೊಡೆದಾಡದಿರಿ’ ಎಂದು ಸಾರಿದಂತೆ, ಬುದ್ಧ, ಬಸವ ಹಾಗೂ ಶರಣರು ಜಾತಿವ್ಯವಸ್ಥೆಯನ್ನು ವಿರೋಧಿಸುತ್ತಾ ಬಂದಿದ್ದಾರೆ. ನಮ್ಮ ಸಮಾಜ ವಿವಿಧ ಜಾತಿ, ಧರ್ಮ, ವರ್ಗ ಮತ್ತು ಭಾಷೆಗಳಿಂದ ಕೂಡಿದ್ದು, ಮನುಜರೆಲ್ಲರೂ ಒಂದೇ ಕುಟುಂಬ ಎಂಬ ಭಾವನೆ ಬೆಳೆಸಿಕೊಳ್ಳಬೇಕು ಎಂದರು.
ಸ್ವಾಭಿಮಾನ ಮತ್ತು ವೈಚಾರಿಕ ಶಿಕ್ಷಣ ಅಗತ್ಯ
ಕೆಲವರು ಶಿಕ್ಷಣ ಪಡೆದರೂ ಗುಲಾಮಗಿರಿಯ ಮನಸ್ಥಿತಿಯಿಂದ ಹೊರಬಂದಿಲ್ಲ. ಸ್ವಾಭಿಮಾನಿಗಳಾಗಿ ಬದುಕುವುದು ಮುಖ್ಯ. ವೈಚಾರಿಕ ಮತ್ತು ವೈಜ್ಞಾನಿಕ ಶಿಕ್ಷಣ ಪಡೆದ ಯುವಪೀಳಿಗೆ ಸ್ವಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಸಿಎಂ ಕರೆ ನೀಡಿದರು.
ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಶಿಕ್ಷಣ ಪ್ರಮಾಣ ಶೇ.15ರಷ್ಟಿದ್ದರೆ, ಇಂದು ಅದು ಶೇ.76ಕ್ಕೆ ಏರಿದರೂ ಜಾತಿವ್ಯವಸ್ಥೆ ಸಂಪೂರ್ಣವಾಗಿ ನಶಿಸಿಲ್ಲ. ಜಡತ್ವದಿಂದ ಕೂಡಿದ ಸಮಾಜಕ್ಕೆ ಚಲನೆ ಬರಲು ಆರ್ಥಿಕ ಮತ್ತು ಸಾಮಾಜಿಕ ಸಮಾನತೆ ಅಗತ್ಯವಿದೆ. ಸಮಾಜದ ಮೌಢ್ಯಗಳನ್ನು ಅಳಿಸುವ ಕಾರ್ಯದಲ್ಲಿ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ನಿರಂತರವಾಗಿ ತೊಡಗಿಸಿಕೊಂಡಿದ್ದರು ಎಂದು ಹೇಳಿದರು.
ಧ್ವನಿಯಿಲ್ಲದವರ ಪರ ಹೋರಾಟ
ಜನರ ಆಶೀರ್ವಾದದಿಂದ ಎಂಟು ಬಾರಿ ಗೆದ್ದು, ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನಾಡಿನ ಎಲ್ಲ ಜನರ ಪ್ರೀತಿಯಿಂದಲೇ ರಾಜಕೀಯದಲ್ಲಿ ಇಂದಿಗೂ ಬದುಕಿದ್ದೇನೆ. ಈ ಸಮಾಜದ ಪ್ರೀತಿಗೆ ಬೆಲೆ ಕಟ್ಟಲಾಗದು. ಧ್ವನಿಯಿಲ್ಲದವರ ಪರವಾಗಿ ಹೋರಾಡುವುದೇ ನನ್ನ ಪ್ರಥಮ ಕೆಲಸ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮಠಗಳಿಗೆ ಅನುದಾನ, 50 ಎಕರೆ ಭೂಮಿ
ಇಡೀ ರಾಜ್ಯಕ್ಕೆ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕಾರ್ಯನಿರ್ವಹಿಸುತ್ತಿದೆ. ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗೆ ವಸತಿ ನಿಲಯ, ಯಾತ್ರಿನಿವಾಸ ಸೇರಿದಂತೆ ಹಲವು ಬೇಡಿಕೆಗಳಿಗೆ ಅನುದಾನ ನೀಡಲಾಗುವುದು. ಜೊತೆಗೆ ಎಲ್ಲಾ ದಲಿತ ಹಾಗೂ ಹಿಂದುಳಿದ ವರ್ಗಗಳ ಮಠಗಳಿಗೆ ಬೆಂಗಳೂರಿನಲ್ಲಿ ಸುಮಾರು 50 ಎಕರೆ ಪ್ರದೇಶವನ್ನು ನೀಡಲು ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಿಎಂ ಘೋಷಿಸಿದರು.







