ಬೀದರ್: ಗಡಿಭಾಗದ ಗ್ರಾಮಗಳಲ್ಲಿ ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಬಗ್ಗೆ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳು ನಡೆಯಬೇಕಾದ ಅಗತ್ಯವಿದೆ ಎಂದು ಪ್ರಾಚಾರ್ಯ ಸುನೀಲಕುಮಾರ ಸಿಂಗಾರೆ ಹೇಳಿದರು.
ಬೀದರ್ ತಾಲ್ಲೂಕಿನ ಮರಕಲ್ ಗ್ರಾಮದ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ, ರಂಗ ತರಂಗ ಸಾಮಾಜಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಮಂಗಳವಾರ ಆಯೋಜಿಸಿದ್ದ ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಶಾಲಾ ಹಂತದಿಂದಲೇ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಮನೋಭಾವ ಬೆಳೆಸಬೇಕು. ಗಡಿಗ್ರಾಮಗಳಲ್ಲಿ ಇತರ ಭಾಷೆಗಳ ಪ್ರಭಾವ ಹೆಚ್ಚಿರುವುದರಿಂದ, ಕನ್ನಡದ ಮಹತ್ವವನ್ನು ಮಕ್ಕಳಿಗೆ ತಿಳಿಸುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಅವರು ಹೇಳಿದರು.
ಕನ್ನಡ ಭಾಷೆ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಅಸ್ತಿತ್ವದ ಸಂಕೇತವಾಗಿದೆ. ವಿದ್ಯಾರ್ಥಿಗಳು ಮಾತೃಭಾಷೆಯ ಬಗ್ಗೆ ಹೆಮ್ಮೆ ಪಡಬೇಕು ಹಾಗೂ ದಿನನಿತ್ಯದ ಬದುಕಿನಲ್ಲಿ ಕನ್ನಡ ಬಳಕೆಯನ್ನು ಹೆಚ್ಚಿಸಬೇಕು ಎಂದು ಅವರು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಂಗ ತರಂಗ ಟ್ರಸ್ಟ್ ಅಧ್ಯಕ್ಷ ಎಂ.ಪಿ. ಮುದಾಳೆ ವಹಿಸಿದ್ದರು. ಅವರು ಮಾತನಾಡಿ, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಟ್ರಸ್ಟ್ ವತಿಯಿಂದ ಮುಂದೆಯೂ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಚಿಂತಕ ಕುಪೇಂದ್ರ ಎಸ್. ಹೊಮನಿ, ಶಿಕ್ಷಕರಾದ ಪ್ರಕಾಶ ಎಸ್., ಮಹಾವೀರ ಹೋಳೋಳೆ, ಪದ್ಮಾವತಿ, ಸೈಯದ್ ಶಾಬಾದ್ ಅಲಿ, ರೇಣುಕಾ, ರವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.







