ಬೆಂಗಳೂರು: ಕ್ರೀಡಾ ಮೀಸಲಾತಿಯಡಿ ಸರ್ಕಾರಿ ಉದ್ಯೋಗ ನಿರೀಕ್ಷೆಯಲ್ಲಿರುವ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಗುಡ್ ನ್ಯೂಸ್ ನೀಡಿದ್ದಾರೆ. ಜನವರಿ 2026ರಲ್ಲಿ ಕ್ರೀಡಾಮೀಸಲಾತಿಯಡಿ ಸರ್ಕಾರಿ ಉದ್ಯೋಗಗಳ ನೇಮಕಾತಿ ಆದೇಶ ಪತ್ರಗಳನ್ನು ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಅವರು ಇಂದು ಬೆಂಗಳೂರಿನಲ್ಲಿ ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ವೇಳೆ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾಗಿರುವ ಎಲ್ಲಾ ಕ್ರೀಡಾ ಸಾಧಕರಿಗೆ ಅಭಿನಂದನೆ ಸಲ್ಲಿಸಿದರು.
ಮುಖ್ಯಮಂತ್ರಿಗಳು ಮಾತನಾಡುತ್ತಾ,
1958ರಲ್ಲಿ ಸ್ಥಾಪನೆಯಾದ ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಇದುವರೆಗೆ ರಾಜ್ಯದ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಕೊಡುಗೆ ನೀಡುತ್ತಾ ಬಂದಿದೆ ಎಂದರು. ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜ್ ಅವರು ಸಂಸ್ಥೆಯ ಅಧ್ಯಕ್ಷರಾಗಿದ ಬಳಿಕ ಸಂಸ್ಥೆ ಇನ್ನಷ್ಟು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ತಮ್ಮ ಅವಧಿಯಲ್ಲಿಯೇ ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ ಸ್ವಂತ ಕಟ್ಟಡಕ್ಕೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು. ಇಡೀ ದೇಶದಲ್ಲಿಯೇ ಆಂಧ್ರಪ್ರದೇಶ ಮತ್ತು ಕೇರಳದಂತೆ ಕರ್ನಾಟಕದಲ್ಲಿಯೂ ಒಲಂಪಿಕ್ಸ್ ಸಂಸ್ಥೆ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು. ಈ ಸಂಸ್ಥೆ ಎಲ್ಲ ಕ್ರೀಡೆಗಳಿಗೂ ಸಮಾನ ಪ್ರೋತ್ಸಾಹ ನೀಡುತ್ತಿದೆ ಎಂದು ಹೇಳಿದರು.
ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ
ರಾಜ್ಯ ಸರ್ಕಾರ ಕ್ರೀಡಾಪಟುಗಳಿಗಾಗಿ ಸರ್ಕಾರಿ ನೇಮಕಾತಿಯಲ್ಲಿ ವಿಶೇಷ ಮೀಸಲಾತಿ ಒದಗಿಸಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಪೊಲೀಸ್ ಹಾಗೂ ಅರಣ್ಯ ಇಲಾಖೆಯಲ್ಲಿ ಶೇ. 3 ರಷ್ಟು ಮೀಸಲಾತಿ
ಇತರೆ ಎಲ್ಲಾ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿ
ಜನವರಿಯಲ್ಲಿ ಕ್ರೀಡಾಮೀಸಲಾತಿಯಡಿ ಸರ್ಕಾರಿ ಉದ್ಯೋಗ ನೇಮಕಾತಿಗೆ ಸಂಬಂಧಿಸಿದ ಸರ್ಕಾರಿ ಆದೇಶ (GO) ಹೊರಡಿಸಲಾಗುವುದು ಎಂದು ಅವರು ಘೋಷಿಸಿದರು.
ಈ ಮೂಲಕ ಹೆಚ್ಚಿನ ಯುವಜನರು ಕ್ರೀಡಾ ಕ್ಷೇತ್ರದಲ್ಲಿ ಸಕ್ರಿಯವಾಗಿ ಭಾಗವಹಿಸಿ ಸಾಧನೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.







