Home » ರಾಜ್ಯ » ತಾಂತ್ರಿಕ ಶಿಕ್ಷಣವನ್ನು ಬಲಗೊಳಿಸಲು ₹2,600 ಕೋಟಿ ಸಾಲ.

ತಾಂತ್ರಿಕ ಶಿಕ್ಷಣವನ್ನು ಬಲಗೊಳಿಸಲು ₹2,600 ಕೋಟಿ ಸಾಲ.

ಬೆಂಗಳೂರು: ಏಷ್ಯಾ ಡೆವಲಪ್‌ಮೆಂಟ್ ಬ್ಯಾಂಕ್ (ಎಡಿಬಿ)
₹2,600 ಕೋಟಿ ಸಾಲ ಪಡೆಯಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ಕರ್ನಾಟಕದ ತಾಂತ್ರಿಕ ಶಿಕ್ಷಣವನ್ನು ಬಲಗೊಳಿಸಲು ನೆರವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕ‌ರ್ ಹೇಳಿದರು.

ಕರ್ನಾಟಕ ಉನ್ನತ ಶಿಕ್ಷಣ ತ್ರೈಮಾಸಿಕ ಪತ್ರಿಕೆ ಬಿಡುಗಡೆ ನಂತರ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಆರ್ಥಿಕ ವ್ಯವಹಾರಗಳ ನಿರ್ವಹಣೆ ಇಲಾಖೆಯ ಸಮ್ಮತಿಯೂ ಸಿಕ್ಕಿದೆ. ಬ್ಯಾಂಕ್ ಅಧಿಕಾರಿಗಳು ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ, ಪರಿಶೀಲಿಸಿದ ನಂತರ ಸಾಲದ ಕಂತುಗಳು ಬಿಡುಗಡೆಯಾಗಲಿವೆ. ಈ ಹಣವನ್ನು ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳ ಸುಧಾರಣೆಗೆ ಬಳಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಉನ್ನತ ಶಿಕ್ಷಣ ಇಲಾಖೆಯ ಆದೇಶಗಳು, ಸೂಚನೆಗಳು, ನಿಯಮಗಳನ್ನು ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ತಲುಪಿಸಲು ಕರ್ನಾಟಕ ಉನ್ನತ ಶಿಕ್ಷಣ ತ್ರೈಮಾಸಿಕ ಪತ್ರಿಕೆ ಸಹಕಾರಿಯಾಗಲಿದೆ. ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಶೈಕ್ಷಣಿಕ ಮಾಹಿತಿ ನೀಡಲೆಂದೇ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಈ ಪತ್ರಿಕೆ ರೂಪಿಸಿದೆ. ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುವ ಕಾರ್ಯ ಚಟುವಟಿಕೆಗಳು ಹಾಗೂ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಪ್ರಗತಿ, ತಂತ್ರಜ್ಞಾನ ಬಳಕೆ ಸೇರಿದಂತೆ ಶಿಕ್ಷಣ ವ್ಯವಸ್ಥೆಯಲ್ಲಿನ ಜಾಗತಿಕ ನಡೆಯನ್ನೂ ಪತ್ರಿಕೆ ಒಳಗೊಂಡಿರುತ್ತದೆ. ಹೆಸರಾಂತ ಶಿಕ್ಷಣ ತಜ್ಞರು, ಸಂಶೋಧಕರು ಪತ್ರಿಕೆಗೆ ಬರೆಯಲಿದ್ದಾರೆ ಎಂದರು.

ರಾಜ್ಯದಲ್ಲಿ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಉದ್ಯೋಗ ಖಾತ್ರಿ ನೀಡುವುದು ಸರ್ಕಾರದ ಆಶಯ. ಕಲಿಕೆಯ ಸಮಯದಲ್ಲೇ ಕೈಗಾರಿಕೆಗೆ ಪೂರಕ ಹಾಗೂ ಉದ್ಯೋಗ ಖಚಿತತೆಯ ಕೌಶಲಾಧಾರಿತ ಶಿಕ್ಷಣವನ್ನು ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಉನ್ನತ ಶಿಕ್ಷಣ ತ್ರೈಮಾಸಿಕ ಪತ್ರಿಕೆ ಬಿಡುಗಡೆ ಮಾಡಿದರು. ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕೆ.ಜಿ. ಜಗದೀಶ್, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ, ಉನ್ನತ ಶಿಕ್ಷಣ ಪರಿಷತ್‌ ಉಪಾಧ್ಯಕ್ಷ ಎಸ್.ಆರ್. ನಿರಂಜನ್, ಕಾರ್ಯಕಾರಿ ನಿರ್ವಾಹಕ ಕೆ.ಜಿ. ಚಂದ್ರಶೇಖ‌ರ್ ಉಪಸ್ಥಿತರಿದ್ದರು.

ಮೇ 31ಕ್ಕೆ ರಾಜ್ಯ ಶಿಕ್ಷಣ ನೀತಿ ಆಯೋಗದ ಅವಧಿ ಮುಕ್ತಾಯವಾಗಿದ್ದು ವಿಸ್ತರಣೆ ಮಾಡಿಲ್ಲ. ಆಯೋಗ ಜೂನ್ ಎರಡನೇ ವಾರದಲ್ಲಿ ಮುಖ್ಯಮಂತ್ರಿಗೆ ವರದಿ ಸಲ್ಲಿಸಲಿದೆ

ಡಾ.ಎಂ.ಸಿ. ಸುಧಾಕರ್ ಉನ್ನತ ಶಿಕ್ಷಣ ಸಚಿವ

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This