Home » ರಾಜ್ಯ » ರಾಜ್ಯದ ಐದು ಗ್ಯಾರಂಟಿ ಯೋಜನೆಗಳು ದೇಶಕ್ಕೇ ಮಾದರಿ: ಸಚಿವ ಈಶ್ವರ್ ಖಂಡ್ರೆ

ರಾಜ್ಯದ ಐದು ಗ್ಯಾರಂಟಿ ಯೋಜನೆಗಳು ದೇಶಕ್ಕೇ ಮಾದರಿ: ಸಚಿವ ಈಶ್ವರ್ ಖಂಡ್ರೆ

ಬೀದರ್ :ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೇ ಮಾದರಿಯಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಬಿ. ಖಂಡ್ರೆ ಅವರು ಹೇಳಿದರು.
ಮಂಗಳವಾರ ನಗರದ ಪ್ರತಾಪ್ ನಗರದ ಘಾಳೆ ಲಕ್ಜುರೀಸ್ ಕನ್ವೆನ್ಷನ್ ಹಾಲ್‌ನಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಅವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿಗಳ ಅನುಷ್ಠಾನ ಕುರಿತ ಜಿಲ್ಲಾ ಮಟ್ಟದ ‘ಗ್ಯಾರಂಟಿ ಕಾರ್ಯಾಗಾರ – ಗ್ಯಾರಂಟಿ ಉತ್ಸವ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯದ 4 ಕೋಟಿಗೂ ಹೆಚ್ಚು ಜನರು ನೇರವಾಗಿ ಫಲಾನುಭವಿಗಳಾಗಿದ್ದಾರೆ. ಆರಂಭದಲ್ಲಿ ಪ್ರತಿಪಕ್ಷಗಳು ಹಾಗೂ ಬಂಡವಾಳಶಾಹಿಗಳು ಈ ಯೋಜನೆಗಳನ್ನು ವಿರೋಧಿಸಿ ಟೀಕಿಸಿದ್ದರೂ, ಇದೀಗ ದೇಶದ ಇತರೆ ರಾಜ್ಯಗಳಲ್ಲಿಯೇ ಇವುಗಳನ್ನು ಮಾದರಿಯಾಗಿ ತೆಗೆದುಕೊಂಡು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುತ್ತಿರುವುದು ನಮ್ಮ ಸರ್ಕಾರದ ಸಾಧನೆಯಾಗಿದೆ ಎಂದು ಹೇಳಿದರು.
ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಯಾವುದೇ ಸಂಶಯವಿಲ್ಲದೆ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿರುವುದು ನಮ್ಮ ಸರ್ಕಾರ ನುಡಿದಂತೆ ನಡೆದಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಸಚಿವರು ಹೇಳಿದರು.
ಬೀದರ್ ಜಿಲ್ಲೆಗೆ ಸಾವಿರಾರು ಕೋಟಿ ರೂ. ಲಾಭ
ಸಚಿವ ಈಶ್ವರ್ ಖಂಡ್ರೆ ಅವರು ಬೀದರ್ ಜಿಲ್ಲೆಯ ಗ್ಯಾರಂಟಿ ಯೋಜನೆಗಳ ವಿವರಗಳನ್ನು ಹಂಚಿಕೊಂಡು,
ಗೃಹಲಕ್ಷ್ಮೀ ಯೋಜನೆ ಅಡಿಯಲ್ಲಿ ಜಿಲ್ಲೆಯ 3,44,855 ಮಹಿಳೆಯರು ಫಲಾನುಭವಿಗಳಾಗಿದ್ದು, ಯಾವುದೇ ಮಧ್ಯವರ್ತಿಗಳಿಲ್ಲದೆ ತಿಂಗಳಿಗೆ ₹2,000ರಂತೆ ಇದುವರೆಗೆ ಒಟ್ಟು ₹1,552 ಕೋಟಿ ನೇರವಾಗಿ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ಹೇಳಿದರು.
ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ ಜಿಲ್ಲೆಯಲ್ಲಿ 3,48,617 ಕುಟುಂಬಗಳು ಫಲಾನುಭವಿಗಳಾಗಿದ್ದು, 200 ಯುನಿಟ್ ಉಚಿತ ವಿದ್ಯುತ್ ಒದಗಿಸಲಾಗಿದೆ. ಈ ಯೋಜನೆಗೆ ಜಿಲ್ಲೆಯಲ್ಲಿ ₹447 ಕೋಟಿ ವೆಚ್ಚ ಮಾಡಲಾಗಿದೆ.
ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಜಿಲ್ಲೆಯ 13,13,355 ಜನರು ಫಲಾನುಭವಿಗಳಾಗಿದ್ದು, ಜಿಲ್ಲೆಯ ಶೇ.80 ರಷ್ಟು ಜನರು ಈ ಯೋಜನೆಯ ವ್ಯಾಪ್ತಿಯಲ್ಲಿ ಒಳಗೊಂಡಿದ್ದಾರೆ ಎಂದು ತಿಳಿಸಿದರು.
ಶಕ್ತಿ ಯೋಜನೆ ಮೂಲಕ ಜಿಲ್ಲೆಯಲ್ಲಿ ಮಹಿಳೆಯರು ಉಚಿತವಾಗಿ 11 ಕೋಟಿಗೂ ಹೆಚ್ಚು ಪ್ರಯಾಣಗಳನ್ನು ಮಾಡಿದ್ದು, ಇದಕ್ಕಾಗಿ ಸರ್ಕಾರ ಕೆಎಸ್‌ಆರ್‌ಟಿಸಿಗೆ ₹315 ಕೋಟಿ ಪಾವತಿಸಿದೆ ಎಂದು ಹೇಳಿದರು.
ಇದರ ಜೊತೆಗೆ, ಬೀದರ್ ಜಿಲ್ಲೆಯ ರೈತರಿಗೆ ಬೆಳೆ ಪರಿಹಾರವಾಗಿ ₹300 ಕೋಟಿ ಬಿಡುಗಡೆ ಮಾಡಲಾಗಿದೆ. ಒಟ್ಟಾರೆ ಐದು ಗ್ಯಾರಂಟಿ ಯೋಜನೆಗಳು ಹಾಗೂ ಇತರೆ ನೆರವುಗಳ ಮೂಲಕ ಜಿಲ್ಲೆಗೆ ಸುಮಾರು ₹2,500 ಕೋಟಿ ಅನುದಾನ ದೊರೆತಿದೆ ಎಂದು ಸಚಿವರು ತಿಳಿಸಿದರು.
ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ
“ನಮ್ಮ ಸರ್ಕಾರ ಬಡವರ ಪರವಾಗಿದೆ. ಸಮಗ್ರ ಅಭಿವೃದ್ಧಿಗೆ ಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಗ್ಯಾರಂಟಿ ಯೋಜನೆಗಳ ಪರಿಣಾಮವಾಗಿ ಕರ್ನಾಟಕ ಇಂದು ದೇಶದಲ್ಲೇ ಅತಿ ಹೆಚ್ಚು ತಲಾ ಆದಾಯ ದಾಖಲಿಸಿದ ರಾಜ್ಯವಾಗಿ ಹೊರಹೊಮ್ಮಿದೆ” ಎಂದು ಈಶ್ವರ್ ಖಂಡ್ರೆ ಹೇಳಿದರು.
ಜನಪರ ಆಡಳಿತ: ಹೆಚ್.ಎಂ. ರೇವಣ್ಣ
ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ. ರೇವಣ್ಣ ಅವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನಪರ ಹಾಗೂ ಬಡವರ ಪರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ ಎಂದು ಹೇಳಿದರು.
ಉಳುವವನೇ ಭೂಮಿಯ ಒಡೆಯ” ಎಂಬ ತತ್ವದೊಂದಿಗೆ 20 ಅಂಶಗಳ ಕಾರ್ಯಕ್ರಮ ಜಾರಿಗೆ ತರಲಾಗಿದ್ದು, ಇದರಿಂದ ಶಿಕ್ಷಣ, ಆರೋಗ್ಯ, ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳು ಸಂಭವಿಸಿವೆ. ಸರ್ಕಾರ ಜನರು ತಮ್ಮ ಬದುಕು ಕಟ್ಟಿಕೊಳ್ಳುವಂತೆ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This