ಬೆಂಗಳೂರು:
ರಾಜ್ಯಾದ್ಯಂತ ದಟ್ಟ ಮಂಜಿನೊಂದಿಗೆ ಭಾರೀ ಶೀತಗಾಳಿ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಶೇಷವಾಗಿ ಬೆಳಗಿನ ಸಮಯದಲ್ಲಿ ದಟ್ಟ ಮಂಜು ಆವರಿಸಿರುವುದರಿಂದ ವಾಹನ ಸಂಚಾರಕ್ಕೂ ತೊಂದರೆ ಉಂಟಾಗುತ್ತಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಹಾಗೂ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ಹೆಚ್ಚಳವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜನವರಿ 19) ಬೆಳಗ್ಗೆಯಿಂದಲೇ ದಟ್ಟ ಮಂಜು ಹಾಗೂ ಭೀಕರ ಚಳಿ ಅನುಭವಕ್ಕೆ ಬಂದಿದೆ. ಕೆಲವೆಡೆ ಮೋಡ ಕವಿದ ವಾತಾವರಣವೂ ಕಂಡುಬಂದಿದೆ. ಮುಂದಿನ ಕೆಲವು ದಿನಗಳವರೆಗೆ ಇದೇ ರೀತಿಯ ವಾತಾವರಣ ನಗರದಲ್ಲಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನಲ್ಲಿ ತೀವ್ರ ಶೀತಗಾಳಿ
ರಾಜ್ಯದ ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ದಟ್ಟ ಮಂಜಿನೊಂದಿಗೆ ಅತೀ ಹೆಚ್ಚು ಚಳಿ ದಾಖಲಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಶೀತಗಾಳಿ ತೀವ್ರವಾಗಿರುವುದರಿಂದ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಇನ್ನು ಬೆಳಗಾವಿ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ವಾತಾವರಣದೊಂದಿಗೆ ಸಾಮಾನ್ಯದಿಂದ ಮಧ್ಯಮ ಮಟ್ಟದ ಶೀತಗಾಳಿ ಬೀಸಲಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲೂ ಚಳಿ ಪ್ರಭಾವ
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲೂ ಒಣಹವೆ ವಾತಾವರಣ ಮುಂದುವರೆಯಲಿದ್ದು, ಬೆಳಗ್ಗೆಯ ವೇಳೆಯಲ್ಲಿ ಚಳಿ ಹೆಚ್ಚು ಅನುಭವವಾಗಲಿದೆ.
ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಚಳಿಯೊಂದಿಗೆ ಒಣಹವೆ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜನರು ತತ್ತರ, ಚಳಿ ಇಳಿಕೆಗೆ ನಿರೀಕ್ಷೆ
ಈಗಾಗಲೇ ಹಲವು ಜಿಲ್ಲೆಗಳಲ್ಲಿ ಭಾರೀ ಚಳಿಗಾಳಿಯಿಂದ ಜನರು ತತ್ತರಿಸಿ ಹೋಗಿದ್ದು, ಬೆಳಿಗ್ಗೆ ಹಾಗೂ ರಾತ್ರಿ ಸಮಯದಲ್ಲಿ ಹೊರಗೆ ಹೋಗಲು ಜನರು ಹಿಂಜರಿಯುತ್ತಿದ್ದಾರೆ. ವೃದ್ಧರು, ಮಕ್ಕಳು ಹಾಗೂ ಅನಾರೋಗ್ಯ ಪೀಡಿತರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.
ಆದರೆ, ಫೆಬ್ರವರಿ ತಿಂಗಳು ಆರಂಭವಾಗುತ್ತಿದ್ದಂತೆ ಚಳಿ ಪ್ರಮಾಣ ಕ್ರಮೇಣ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನರು ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ.







