Home » ರಾಜ್ಯ » ವಿಕಲಚೇತನರ ಸಬಲೀಕರಣಕ್ಕೆ ರಾಜ್ಯ ಸರ್ಕಾರದ ಐತಿಹಾಸಿಕ ಹೆಜ್ಜೆಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ವಿಶೇಷ ಉದ್ಯೋಗ ಮೇಳಮೂರು ತಿಂಗಳೊಳಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜನೆ

ವಿಕಲಚೇತನರ ಸಬಲೀಕರಣಕ್ಕೆ ರಾಜ್ಯ ಸರ್ಕಾರದ ಐತಿಹಾಸಿಕ ಹೆಜ್ಜೆಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ವಿಶೇಷ ಉದ್ಯೋಗ ಮೇಳಮೂರು ತಿಂಗಳೊಳಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜನೆ

ಬೆಂಗಳೂರು:ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ, ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ವಿಕಲಚೇತನರಿಗಾಗಿಯೇ ವಿಶೇಷ ಉದ್ಯೋಗ ಮೇಳವನ್ನು ಮುಂದಿನ ಮೂರು ತಿಂಗಳೊಳಗೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಅವರು ತಿಳಿಸಿದ್ದಾರೆ.
ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಹಭಾಗಿತ್ವದಲ್ಲಿ ಈ ವಿಶೇಷ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದ್ದು, ಇದು ರಾಜ್ಯ ಸರ್ಕಾರದ ವಿನೂತನ ಹಾಗೂ ಮಹತ್ವದ ಕಾರ್ಯಕ್ರಮವಾಗಿದೆ ಎಂದು ಹೇಳಿದರು.
ವಿಕಲಚೇತನರಿಗೆ ಉದ್ಯೋಗಾವಕಾಶ ಕಲ್ಪಿಸಿ ಅವರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಪ್ರಸಕ್ತ ಸಾಲಿನಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ಮೂಲಕ ಮಾರುಕಟ್ಟೆ ಬೇಡಿಕೆಗೆ ಅನುಗುಣವಾದ ವೃತ್ತಿಪರ ತರಬೇತಿಯನ್ನು ವಿಕಲಚೇತನರಿಗೆ ನೀಡಲಾಗುತ್ತಿದೆ. ಈ ಯೋಜನೆಯಡಿ ಒಟ್ಟು 1,000 ಅಭ್ಯರ್ಥಿಗಳಿಗೆ 3 ಕೋಟಿ ರೂಪಾಯಿ ವೆಚ್ಚದಲ್ಲಿ ಕೌಶಲ್ಯ ತರಬೇತಿ, ಟೂಲ್ ಕೀಟ್ ವಿತರಣೆ ಹಾಗೂ ಉದ್ಯೋಗಾವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಡಾ. ಪಾಟೀಲ್ ವಿವರಿಸಿದರು.
ಇದಲ್ಲದೆ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರದ ಮೂಲಕ ವಿಕಲಚೇತನರಿಗೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಗಳನ್ನು ನೀಡಲಾಗುತ್ತಿದೆ. ಸರ್ಕಾರದ ಆದೇಶದಂತೆ ವಿಕಲಚೇತನರಿಗೆ ನೀಡಲಾಗುತ್ತಿದ್ದ ತರಬೇತಿಗಳಲ್ಲಿ ಇದ್ದ ಶೇ.3ರ ಮೀಸಲಾತಿಯನ್ನು ಶೇ.5ಕ್ಕೆ ಹೆಚ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
2017-18ರಿಂದ 2024-25ನೇ ಸಾಲಿನವರೆಗೆ ನೋಂದಣಿಯಾದ ಅಭ್ಯರ್ಥಿಗಳ ಪೈಕಿ 540 ವಿಕಲಚೇತನರು ವಿವಿಧ ಜಾಬ್ ರೋಲ್‌ಗಳಡಿ ವಿವಿಧ ತರಬೇತಿದಾರ ಸಂಸ್ಥೆಗಳ ಮೂಲಕ ತರಬೇತಿ ಪಡೆದಿದ್ದಾರೆ. ಇವರಲ್ಲಿ 83 ಜನರಿಗೆ ಉದ್ಯೋಗಾವಕಾಶ ದೊರೆತಿದೆ. ಮುಖ್ಯಮಂತ್ರಿ ಅವರ ‘ಕೌಶಲ್ಯ ಕರ್ನಾಟಕ’ ಯೋಜನೆಯಡಿ 10 ವಿಕಲಚೇತನರಿಗೆ ತರಬೇತಿ ನೀಡಲಾಗಿದೆ ಎಂದು ಸಚಿವರು ಹೇಳಿದರು.
ಇತ್ತೀಚೆಗೆ ಬಿಎಂಎಸ್ ಕಾಲೇಜಿನಲ್ಲಿ ಆಯೋಜಿಸಲಾದ ಉದ್ಯೋಗ ಮೇಳದಲ್ಲಿ 1,200 ಅಭ್ಯರ್ಥಿಗಳು ಭಾಗವಹಿಸಿದ್ದು, 75 ಜನರಿಗೆ ಉದ್ಯೋಗ ದೊರೆತಿರುವುದನ್ನು ಅಂಕಿ-ಅಂಶಗಳೊಂದಿಗೆ ವಿವರಿಸಿದ ಸಚಿವರು, ಮುಂದಿನ ದಿನಗಳಲ್ಲಿ ವಿಕಲಚೇತನರಿಗಾಗಿ ಇನ್ನಷ್ಟು ಉದ್ಯೋಗ ಮತ್ತು ತರಬೇತಿ ಆಧಾರಿತ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಭರವಸೆ ನೀಡಿದರು.
ರಾಜ್ಯ ಸರ್ಕಾರದ ಈ ಕ್ರಮವು ವಿಕಲಚೇತನರ ಸಬಲೀಕರಣದ ದಿಕ್ಕಿನಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This