Home » ರಾಜ್ಯ » ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಪೋಷಕರ ಹೊರೆ ಇಳಿಕೆ

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಪೋಷಕರ ಹೊರೆ ಇಳಿಕೆ

ಬೆಂಗಳೂರು, ಫೆಬ್ರವರಿ 03:
ರಾಜ್ಯದಲ್ಲಿನ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ವಿದ್ಯಾ ವಿಕಾಸ ಯೋಜನೆ ಅಡಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕಗಳ ಜೊತೆಗೆ ನೋಟ್‌ಬುಕ್‌ಗಳನ್ನು ಉಚಿತವಾಗಿ ವಿತರಿಸಲು ಸರ್ಕಾರ ಒಪ್ಪಿಗೆ ನೀಡಿದೆ.
2026–27ನೇ ಶೈಕ್ಷಣಿಕ ಸಾಲಿನಲ್ಲಿ 1ರಿಂದ 10ನೇ ತರಗತಿಯವರೆಗೆ ಓದುತ್ತಿರುವ ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ನೀಡಲು ಸರ್ಕಾರ ಅನುಮೋದನೆ ನೀಡಿದೆ. ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ ಶುಭಮಂಗಳಾ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಈ ಯೋಜನೆಯಿಂದ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಸುಮಾರು 61 ಲಕ್ಷ ವಿದ್ಯಾರ್ಥಿಗಳಿಗೆ ನೇರ ಲಾಭ ದೊರೆಯಲಿದೆ. ಇದೇ ಮೊದಲ ಬಾರಿಗೆ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದ ಜೊತೆಗೆ ನೋಟ್‌ಬುಕ್‌ಗಳನ್ನೂ ಉಚಿತವಾಗಿ ವಿತರಿಸಲು ಸರ್ಕಾರ ಮುಂದಾಗಿದೆ.
ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಸರ್ಕಾರದ ಗ್ರೀನ್ ಸಿಗ್ನಲ್
ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ಅಭ್ಯಾಸ ಪುಸ್ತಕ ಮತ್ತು 1ರಿಂದ 12ನೇ ತರಗತಿಯವರೆಗೆ ದಿನಚರಿ ಪುಸ್ತಕ ವಿತರಣೆಗಾಗಿ ಶಿಕ್ಷಣ ಇಲಾಖೆ ಸರ್ಕಾರಕ್ಕೆ 30 ಕೋಟಿ 83 ಲಕ್ಷ 25 ಸಾವಿರ ರೂಪಾಯಿ ಮೊತ್ತದ ಪ್ರಸ್ತಾವನೆ ಸಲ್ಲಿಸಿತ್ತು.
ಇದೀಗ ಶಿಕ್ಷಣ ಇಲಾಖೆ ಸಲ್ಲಿಸಿದ ಪ್ರಸ್ತಾವನೆಗೆ ಸರ್ಕಾರ ಸಂಪೂರ್ಣ ಒಪ್ಪಿಗೆ ಸೂಚಿಸಿದ್ದು, 290.46 ಕೋಟಿ ರೂಪಾಯಿ ಅನುದಾನವನ್ನು ಶಾಲಾ ಶಿಕ್ಷಣ ಇಲಾಖೆಗೆ ಮಂಜೂರು ಮಾಡಲಾಗಿದೆ. ಇದರ ಬೆನ್ನಲ್ಲೇ ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲೇ ಮಕ್ಕಳಿಗೆ ಪಠ್ಯಪುಸ್ತಕಗಳನ್ನು ವಿತರಿಸಲು ಸಿದ್ಧತೆ ಕೈಗೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಆದೇಶದಲ್ಲಿ ಪಠ್ಯಪುಸ್ತಕಗಳ ಕಾಗದ ಮತ್ತು ಮುದ್ರಣ ಗುಣಮಟ್ಟದಲ್ಲಿ ಯಾವುದೇ ರಾಜಿ ಆಗಬಾರದು, ಹೆಚ್ಚುವರಿ ಪುಸ್ತಕಗಳ ಬೇಡಿಕೆ ಸಲ್ಲಿಸಿ ಅಕ್ರಮ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಪೋಷಕರ ಹೊರೆ ಇಳಿಸಿದ ಸರ್ಕಾರ
ಇದುವರೆಗೆ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಪಠ್ಯಪುಸ್ತಕ ನೀಡಲಾಗುತ್ತಿತ್ತಾದರೂ, ನೋಟ್‌ಬುಕ್‌ಗಳನ್ನು ಪೋಷಕರೇ ಖರೀದಿಸಬೇಕಾಗಿತ್ತು. ಈಗ ಸರ್ಕಾರವೇ ಪಠ್ಯಪುಸ್ತಕಗಳ ಜೊತೆಗೆ ನೋಟ್‌ಬುಕ್‌ಗಳನ್ನೂ ಉಚಿತವಾಗಿ ನೀಡುತ್ತಿರುವುದರಿಂದ ಪೋಷಕರ ಆರ್ಥಿಕ ಹೊರೆ ಗಣನೀಯವಾಗಿ ಕಡಿಮೆಯಾಗಲಿದೆ.
ಇನ್ನು 11 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಸಹ ಉಚಿತ ಪುಸ್ತಕ ವಿತರಣೆ ನಡೆಯಲಿರುವುದರಿಂದ, ಪಿಯುಸಿ ವಿದ್ಯಾರ್ಥಿಗಳ ಪೋಷಕರಿಗೂ ದೊಡ್ಡ ನಿರಾಳತೆ ಸಿಗಲಿದೆ.
ಆದೇಶದಲ್ಲಿ ಏನೆಲ್ಲ ಇದೆ?
ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ದ್ವಿಭಾಷಾ ಬಾಲ ಚೇತನ ಚಟುವಟಿಕೆ ಪುಸ್ತಕಗಳು
ಸರ್ಕಾರಿ ಶಾಲೆಗಳ 4ರಿಂದ 9ನೇ ತರಗತಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅಭ್ಯಾಸ ಪುಸ್ತಕಗಳು
ಸರ್ಕಾರಿ ಶಾಲಾ ಮತ್ತು ಕಾಲೇಜುಗಳ ಪೂರ್ವ ಪ್ರಾಥಮಿಕದಿಂದ 12ನೇ ತರಗತಿಯವರೆಗೆ ದಿನಚರಿ ಪುಸ್ತಕಗಳು
1ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳು ವಿತರಣೆ
ಪಾರದರ್ಶಕ ಟೆಂಡರ್ ಪ್ರಕ್ರಿಯೆ
ಕೆಟಿಪಿಪಿ ಕಾಯ್ದೆ–1999ರ ಅಡಿಯಲ್ಲಿ ರೂಪಿಸಿದ ನಿಯಮಗಳಂತೆ ಪಾರದರ್ಶಕ ಟೆಂಡರ್ ಕರೆದು, ಕರ್ನಾಟಕ ಪುಸ್ತಕ ಸಂಘದ ಮೂಲಕ ಪುಸ್ತಕಗಳನ್ನು ಮುದ್ರಿಸಿ ವಿತರಿಸಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚಿಸಲಾಗಿದೆ.
ಒಟ್ಟು 264.62 ಕೋಟಿ ರೂಪಾಯಿ ವೆಚ್ಚದಲ್ಲಿ ವಿದ್ಯಾ ವಿಕಾಸ ಯೋಜನೆಯಡಿ ಪುಸ್ತಕ ವಿತರಣೆಗೆ ಅನುಮೋದನೆ ನೀಡಲಾಗಿದೆ. ಸಮಗ್ರ ಶಿಕ್ಷಣ ಕರ್ನಾಟಕದಡಿ ಹೊಸದಾಗಿ ಅನುಷ್ಠಾನಗೊಳ್ಳುವ ಕಾರ್ಯಕ್ರಮಗಳಿಗೆ 25.841 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ.
ಶೈಕ್ಷಣಿಕ ವರ್ಷದ ಆರಂಭದಲ್ಲೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳು ತಲುಪಬೇಕು ಎಂಬ ಉದ್ದೇಶದಿಂದ, ಎಸ್‌ಎಟಿಎಸ್ ಮೂಲಕ ಶಾಲೆಗಳಿಂದ ಬೇಡಿಕೆ ಸಂಗ್ರಹಿಸಿ ಎಲ್ಲಾ ವಿವರಗಳನ್ನು ದಾಖಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This