ಜಗತ್ತು ವೇಗವಾಗಿ ಬೆಳೆಯುತ್ತಿದ್ದು, ಅದರೊಂದಿಗೆ ನಮ್ಮಲ್ಲೂ ಬದಲಾವಣೆ ಆಗಬೇಕಾದರೆ ಶಿಕ್ಷಣ ಅತ್ಯಾವಶ್ಯಕವಾಗಿದೆ. ಇಂದಿನ ಪ್ರಪಂಚದಲ್ಲಿ ಜ್ಞಾನಕ್ಕೆ ಮಾತ್ರ ಬೆಲೆ ಇದೆ. ಯಾರು ಜ್ಞಾನ ಸಂಪಾದಿಸುತ್ತಾರೋ ಅವರು ಜೀವನದಲ್ಲಿ ಸಾಧನೆ ಮಾಡುತ್ತಾರೆ ಎಂದು ಅರಣ್ಯ ಮತ್ತು ಜೀವಿಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.
ಅವರು ಭಾನುವಾರ ಪಟ್ಟಣದ ವೀರೇಂದ್ರ ಪಾಟೀಲ ಪಬ್ಲಿಕ್ ಶಾಲೆಯ 24ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಿ ಈ ಭಾಗದಲ್ಲಿ ಶೈಕ್ಷಣಿಕ ಬದಲಾವಣೆಗೆ ಕಾರಣವಾಗಿರುವ ವೀರೇಂದ್ರ ಪಾಟೀಲ ಪಬ್ಲಿಕ್ ಶಾಲೆ ಹಾಗೂ ಪಿಯು ವಿಜ್ಞಾನ ಮಹಾವಿದ್ಯಾಲಯಗಳು ಹಿಂದುಳಿದ ಗಡಿ ಭಾಗದ ವಿದ್ಯಾರ್ಥಿಗಳಿಗೆ ಕಾಮಧೇನು ಹಾಗೂ ಕಲ್ಪವೃಕ್ಷಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಶ್ಲಾಘಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶವು ಸಾಂಸ್ಕೃತಿಕ ಹಾಗೂ ಅಧ್ಯಾತ್ಮಿಕವಾಗಿ ಬಹಳ ಮುಂದುವರಿದಿದ್ದರೂ, ಶೈಕ್ಷಣಿಕ, ಸಾಮಾಜಿಕ ಮತ್ತು ಅಭಿವೃದ್ಧಿ ಕ್ಷೇತ್ರಗಳಲ್ಲಿ ಹಿಂದುಳಿದಿದೆ. ಒಂದು ಕಾಲದಲ್ಲಿ ಕಲಬುರಗಿ ಮತ್ತು ಬೀದರ್ ಜಿಲ್ಲಾ ಕೇಂದ್ರಗಳಿಗೆ ಮಾತ್ರ ಸೀಮಿತವಾಗಿದ್ದ ಶಿಕ್ಷಣ ಇಂದು ಗ್ರಾಮೀಣ ಪ್ರದೇಶಗಳಿಗೂ ವಿಸ್ತರಿಸಿರುವುದು ಸಂತಸದ ಸಂಗತಿ ಎಂದು ಹೇಳಿದರು.
ಹವಾಮಾನ ಬದಲಾವಣೆಗೆ ಪರಿಸರ ಮಾಲಿನ್ಯವೇ ಪ್ರಮುಖ ಕಾರಣವಾಗಿದೆ ಎಂದು ತಿಳಿಸಿದ ಸಚಿವರು, ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಹೆಚ್ಚು ಹೆಚ್ಚು ಮರಗಳನ್ನು ಬೆಳೆಸಿ ಹಸಿರು ಹೊದಿಕೆಯನ್ನು ವಿಸ್ತರಿಸಲು ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ನಿವೃತ್ತ ಪ್ರಾಧ್ಯಾಪಕಿ ಶಾರದಾಬಾಯಿ ಸುಭಾಷ ರಾಠೋಡ್ ಮಾತನಾಡಿ, ಚಿಂಚೋಳಿಯಂತಹ ಹಿಂದುಳಿದ ಪ್ರದೇಶದಲ್ಲಿ ಅತಿಕಡಿಮೆ ಶುಲ್ಕದಲ್ಲಿ ಕೇಂದ್ರೀಯ ಪಠ್ಯಕ್ರಮದ ಶಾಲೆಯನ್ನು ಆರಂಭಿಸಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಮಾಜಿ ಶಾಸಕ ಕೈಲಾಸ ವೀರೇಂದ್ರ ಪಾಟೀಲ ಅವರ ಸಾಮಾಜಿಕ ಕಾಳಜಿ ಶ್ಲಾಘನೀಯವಾಗಿದೆ ಎಂದು ಹೇಳಿದರು.
ಮುಗುಳ ನಾಗಾವಿ ಕಟ್ಟಿಮಠದ ಅಭಿನವ ಸಿದ್ದಲಿಂಗ ಸ್ವಾಮೀಜಿ ಕಾರ್ಯಕ್ರಮಕ್ಕೆ ಸಾನ್ನಿಧ್ಯ ವಹಿಸಿದ್ದರು. ಉದ್ಯಮಿ ರವಿ ಸಹುಕಾರ ತಂಬಾಕೆ, ಕ್ಷೇತ್ರ ಶಿಕ್ಷಣಾಧಿಕಾರಿ ವಿ. ಲಕ್ಷ್ಮಯ್ಯ, ಅಭಿನಂದನ ಪಾಟೀಲ, ಮಹೇಮೂದ್ ಪಟೇಲ್ ಸೇರಿದಂತೆ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೈಲಾಸ ವೀರೇಂದ್ರ ಪಾಟೀಲ ಮಾತನಾಡಿ, 24 ವರ್ಷಗಳ ಹಿಂದೆ ಸ್ಥಾಪನೆಯಾದ ನಮ್ಮ ಸಂಸ್ಥೆ ಇಂದು ಹೆಮ್ಮರವಾಗಿ ಬೆಳೆಯಲು ಪಾಲಕರ ಸಹಕಾರವೇ ಮುಖ್ಯ ಕಾರಣವಾಗಿದೆ. ನಮ್ಮ ಶಾಲೆಯಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ವೈದ್ಯರು, ಎಂಜಿನಿಯರ್‌ಗಳು, ಕೃಷಿಕರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಸ್ವಾವಲಂಬಿ ಬದುಕು ಸಾಗಿಸುತ್ತಿದ್ದಾರೆ ಎಂದು ಹೇಳಿದರು.
ಉಪಾಧ್ಯಕ್ಷ ಬಸವರಾಜ ಮಾಲಿ ಶಿಕ್ಷಣ ಸಂಸ್ಥೆ ನಡೆದು ಬಂದ ದಾರಿಯನ್ನು ವಿವರಿಸಿದರು. ಶಿವಕುಮಾರ ಪೋಲಕಪಳ್ಳಿ ಕಾರ್ಯಕ್ರಮ ನಿರೂಪಿಸಿದರು. ಅಬ್ರಾಹಂ ಥಾಮಸ್ ಅತಿಥಿಗಳನ್ನು ಪರಿಚಯಿಸಿದರು. ವಿಶ್ವನಾಥ ನಾಯನೂರು ವಂದಿಸಿದರು.
ಕನ್ನಡ ಹಾಗೂ ಆಂಗ್ಲ ಮಾಧ್ಯಮದ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.







