ಚಿತ್ರದುರ್ಗ :ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ವರ್ಷಕ್ಕೆ ₹8 ಲಕ್ಷಕ್ಕೂ ಅಧಿಕ ವಹಿವಾಟು ನಡೆಸುವವರ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗುತ್ತಿದ್ದು, ಇದರಿಂದ ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಗಂಭೀರ ತೊಂದರೆ ಉಂಟಾಗಿದೆ ಎಂದು ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ. ಹೆಚ್. ಕೃಷ್ಣ ತಿಳಿಸಿದ್ದಾರೆ.
ಪೇಟಿಎಂ, ಫೋನ್ ಪೇ ಸೇರಿದಂತೆ ಡಿಜಿಟಲ್ ಪಾವತಿ ವ್ಯವಸ್ಥೆಗಳ ಮೂಲಕ ಸಣ್ಣ ವ್ಯಾಪಾರಸ್ಥರೂ ಹಣ ಸ್ವೀಕರಿಸುತ್ತಿರುವುದರಿಂದ ಅವರ ವಾರ್ಷಿಕ ವಹಿವಾಟು ₹8 ಲಕ್ಷ ಮೀರಿದಂತೆ ತೋರಿಸುತ್ತದೆ. ಆದರೆ ಅತಿ ಕಡಿಮೆ ಲಾಭದೊಂದಿಗೆ ಜೀವನ ಸಾಗಿಸುತ್ತಿರುವ ಇಂತಹ ವ್ಯಾಪಾರಸ್ಥರಿಗೆ ಬಿಪಿಎಲ್ ಕಾರ್ಡ್ ರದ್ದತಿಯಿಂದ ಆಹಾರ ಭದ್ರತೆ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಯನ್ನು ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ನಿಯಮಗಳಿಗೆ ಸೂಕ್ತ ಮಾರ್ಪಾಡುಗಳನ್ನು ತರಲು ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಅವರು ಹೇಳಿದರು.
ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಆಯೋಗದ ಪ್ರವಾಸ
ಕರ್ನಾಟಕ ರಾಜ್ಯ ಆಹಾರ ಆಯೋಗವು ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಪ್ರವಾಸ ಕೈಗೊಂಡಿದೆ. ಡಿಸೆಂಬರ್ 31ರಂದು ಆಯೋಗವು ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿ ವಾಸ್ತವ್ಯ ಹೂಡಲಿದ್ದು, ಜಿಲ್ಲೆಯ ಪಡಿತರ ವಿತರಣೆ ವ್ಯವಸ್ಥೆ, ಅಂಗನವಾಡಿ ಕೇಂದ್ರಗಳು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ನೀಡಲಾಗುತ್ತಿರುವ ಆಹಾರ ಸರಬರಾಜು ಸಂಬಂಧಿಸಿದಂತೆ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ನೇರವಾಗಿ ದೂರು ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
14 ಇಲಾಖೆಗಳ ಆಹಾರ ವ್ಯವಸ್ಥೆ ಮೇಲೆ ಆಯೋಗದ ಮೇಲ್ವಿಚಾರಣೆ
ಸರ್ಕಾರದ 14 ಇಲಾಖೆಗಳ ವ್ಯಾಪ್ತಿಗೆ ಬರುವ ಆಹಾರ ವಿತರಣೆ ಹಾಗೂ ಗುಣಮಟ್ಟದ ಮೇಲ್ವಿಚಾರಣೆಯನ್ನು ರಾಜ್ಯ ಆಹಾರ ಆಯೋಗ ನಡೆಸುತ್ತಿದ್ದು, ದುರ್ಬಲ ವರ್ಗದ ಜನರಿಗೆ ದೊರಕಬೇಕಾದ ಆಹಾರದ ಹಕ್ಕನ್ನು ಸಂರಕ್ಷಿಸುವ ಕೆಲಸ ಮಾಡುತ್ತಿದೆ. ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ ರಾಜ್ಯದ 31 ಜಿಲ್ಲೆಗಳಲ್ಲಿ ಆಯೋಗ ಪ್ರವಾಸ ಕೈಗೊಂಡಿದೆ.
ಆಯೋಗದ ಭೇಟಿ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡಿದರೆ, ಅಧಿಕಾರಿಗಳು ತಾತ್ಕಾಲಿಕವಾಗಿ ಸಮಸ್ಯೆಗಳನ್ನು ಮುಚ್ಚಿಡುವ ಸಾಧ್ಯತೆ ಇರುವುದರಿಂದ ಯಾವುದೇ ಅಧಿಕೃತ ಮಾಹಿತಿ ನೀಡದೆ ಅಚ್ಚರಿ ಭೇಟಿ ನೀಡಿ ವಾಸ್ತವ ಸಮಸ್ಯೆಗಳನ್ನು ಗುರುತಿಸಲಾಗುತ್ತಿದೆ. ಲೋಪದೋಷ ಅಥವಾ ಭ್ರಷ್ಟಾಚಾರ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಡಾ. ಹೆಚ್. ಕೃಷ್ಣ ಹೇಳಿದರು.
ಜಿಲ್ಲಾ ಮಟ್ಟದಲ್ಲಿ ಕುಂದು ಕೊರತೆ ನಿವಾರಣಾ ಅಧಿಕಾರಿಗೆ ನಿರ್ದೇಶನ
ಆಹಾರ ಸರಬರಾಜು ಹಾಗೂ ವಿತರಣೆಯಲ್ಲಿ ಉಂಟಾಗುವ ಸಮಸ್ಯೆಗಳ ಕುರಿತು ಸಾರ್ವಜನಿಕರು ದೂರು ಸಲ್ಲಿಸಲು ಜಿಲ್ಲಾ ಮಟ್ಟದಲ್ಲಿ ಪ್ರತ್ಯೇಕ ಜಿಲ್ಲಾ ಕುಂದು ಕೊರತೆ ನಿವಾರಣಾ ಅಧಿಕಾರಿಯನ್ನು ನೇಮಿಸುವ ವ್ಯವಸ್ಥೆ ಇದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಈ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳು ನಿರ್ವಹಿಸುತ್ತಿದ್ದಾರೆ. ಆದರೆ ಇತರೆ ಜಿಲ್ಲೆಗಳಂತೆ ಇಲ್ಲಿ ಕೂಡ ಪ್ರತ್ಯೇಕ ಅಧಿಕಾರಿಯನ್ನು ನೇಮಿಸುವಂತೆ ಆಯೋಗದಿಂದ ನಿರ್ದೇಶನ ನೀಡಲಾಗುವುದು ಎಂದು ಅವರು ತಿಳಿಸಿದರು.
ನ್ಯಾಯಬೆಲೆ ಅಂಗಡಿಗಳಲ್ಲಿ ಮಾಹಿತಿ ಫಲಕ ಕಡ್ಡಾಯ
ನ್ಯಾಯಬೆಲೆ ಅಂಗಡಿಗಳಲ್ಲಿ ಭ್ರಷ್ಟಾಚಾರ ತಡೆಗಟ್ಟಲು ಹಾಗೂ ಪಾರದರ್ಶಕ ವಿತರಣೆಗೆ ಅನುಕೂಲವಾಗುವಂತೆ, ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಆಯೋಗದ ಅಧ್ಯಕ್ಷರು, ಸದಸ್ಯರು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳ ಹೆಸರು ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ಮಾಹಿತಿ ಫಲಕ ಅಳವಡಿಸಲು ಸೂಚಿಸಲಾಗಿದೆ.
ಮಂಗಳವಾರ ಹೊರತುಪಡಿಸಿ ಪ್ರತಿದಿನವೂ ನ್ಯಾಯಬೆಲೆ ಅಂಗಡಿಗಳು ತೆರೆದಿರಬೇಕು. ಒಂದು ದೇಶ–ಒಂದು ಪಡಿತರ ಚೀಟಿ ವ್ಯವಸ್ಥೆ ಜಾರಿಯಲ್ಲಿದ್ದು, ವಲಸಿಗ ಕಾರ್ಮಿಕರು ಹತ್ತಿರದ ಯಾವುದೇ ಪಡಿತರ ಅಂಗಡಿಯಲ್ಲಿ ಆಹಾರ ಧಾನ್ಯ ಪಡೆಯಬಹುದಾಗಿದೆ. ಉಚಿತ ಆಹಾರ ಧಾನ್ಯಗಳ ಜೊತೆಗೆ ಸೋಪು, ಎಣ್ಣೆ ಸೇರಿದಂತೆ ಇತರೆ ವಸ್ತುಗಳನ್ನು ಖರೀದಿಸಲು ಒತ್ತಾಯಿಸುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಶಾಲೆಗಳಲ್ಲಿ ಕಡ್ಡಾಯ ಮೊಟ್ಟೆ ವಿತರಣೆ
ಕೆಲವು ಶಾಲೆಗಳಲ್ಲಿ ಬಿಸಿಯೂಟದ ಸಂದರ್ಭದಲ್ಲಿ ಮೊಟ್ಟೆ ವಿತರಣೆ ಮಾಡದಿರುವುದು ಆಯೋಗದ ಗಮನಕ್ಕೆ ಬಂದಿದೆ. ಮೊಟ್ಟೆ ಪೌಷ್ಠಿಕ ಆಹಾರವಾಗಿದ್ದು ಮಕ್ಕಳ ದೈಹಿಕ ಬೆಳವಣಿಗೆಗೆ ಅತ್ಯಂತ ಅಗತ್ಯವಾದುದರಿಂದ, ಯಾವುದೇ ತಾರತಮ್ಯವಿಲ್ಲದೆ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಮೊಟ್ಟೆ ವಿತರಿಸುವಂತೆ ಸೂಚನೆ ನೀಡಲಾಗಿದೆ.
ಇದೇ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗರ್ಭಿಣಿಯರು ಹಾಗೂ ಮೂರು ವರ್ಷದೊಳಗಿನ ಮಕ್ಕಳಿಗೆ ನೀಡಲಾಗುತ್ತಿರುವ ಪೌಷ್ಠಿಕ ಆಹಾರದ ಗುಣಮಟ್ಟವನ್ನು ಕಡ್ಡಾಯವಾಗಿ ಕಾಪಾಡುವಂತೆ ನಿರ್ದೇಶನ ನೀಡಲಾಗಿದೆ ಎಂದು ಡಾ. ಹೆಚ್. ಕೃಷ್ಣ ತಿಳಿಸಿದರು.
ಉಪಸ್ಥಿತರು
ಪತ್ರಿಕಾಗೋಷ್ಠಿಯಲ್ಲಿ ಆಯೋಗದ ಸದಸ್ಯರಾದ ಲಿಂಗರಾಜ ಕೋಟೆ, ಮಾರುತಿ ಎಂ. ದೊಡ್ಡಲಿಂಗಣ್ಣನವರ, ಕೆ.ಎಸ್. ವಿಜಯಲಕ್ಷ್ಮಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಕೆ.ಎಸ್.ಸಿ.ಎಸ್.ಇ ಜಿಲ್ಲಾ ವ್ಯವಸ್ಥಾಪಕ ಎಸ್.ಕೆ. ಮಲ್ಲಿಕಾರ್ಜುನ ಉಪಸ್ಥಿತರಿದ್ದರು.







