ಬೆಳಗಾವಿ | ರಾಜ್ಯದಲ್ಲಿನ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರವು ಮಹತ್ವದ ಸಿಹಿಸುದ್ದಿ ನೀಡಿದೆ. ಪೊಲೀಸ್ ಇಲಾಖೆಯಿಂದ 3,600 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅದು ಪ್ರಸ್ತುತ ಪರಿಶೀಲನಾ ಹಂತದಲ್ಲಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ವಿಧಾನಪರಿಷತ್ ಕಲಾಪದಲ್ಲಿ ಕಾಂಗ್ರೆಸ್ನ ಡಿ.ಟಿ. ಶ್ರೀನಿವಾಸ್ ಹಾಗೂ ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ಅವರು ಕೇಳಿದ ಪ್ರತ್ಯೇಕ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಪೊಲೀಸ್ ಇಲಾಖೆಯಿಂದ 3,600 ಕಾನ್ಸ್ಟೇಬಲ್ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಅದರ ಪರಿಶೀಲನೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು.
ರಾಜ್ಯ ಸರ್ಕಾರವು ಈಗಾಗಲೇ ಪೊಲೀಸ್ ಇಲಾಖೆಯಲ್ಲಿ ಹಂತ ಹಂತವಾಗಿ ನೇಮಕಾತಿ ಪ್ರಕ್ರಿಯೆ ಕೈಗೊಂಡು ಬರುತ್ತಿದೆ. ಅದರ ಭಾಗವಾಗಿ ಸುಮಾರು 900 ಎಎಸ್ಐ (Assistant Sub Inspector) ಹುದ್ದೆಗಳ ನೇಮಕಾತಿ ಪೂರ್ಣಗೊಂಡಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಪ್ರಸ್ತುತ 10 ತಿಂಗಳ ತರಬೇತಿ ಪಡೆಯುತ್ತಿದ್ದಾರೆ. ತರಬೇತಿ ಪೂರ್ಣಗೊಂಡ ಬಳಿಕ ಅವರಿಗೆ ಅಧಿಕೃತವಾಗಿ ಹುದ್ದೆ ನೀಡಲಾಗುವುದು ಎಂದು ಗೃಹ ಸಚಿವರು ತಿಳಿಸಿದರು.
ಇದಲ್ಲದೆ, ರಾಜ್ಯ ಸರ್ಕಾರದ ಇತರ ಬೇರೆ ಬೇರೆ ಇಲಾಖೆಗಳಲ್ಲಿ ನೇಮಕಾತಿ ಹಾಗೂ ಮುಂಬಡ್ತಿ ಹುದ್ದೆಗಳ ಅನುಪಾತ 50:50 ಆಗಿದ್ದರೆ, ಪೊಲೀಸ್ ಇಲಾಖೆಯಲ್ಲಿ ಈ ಅನುಪಾತ 70:30 ಆಗಿದೆ ಎಂದು ಅವರು ಮಾಹಿತಿ ನೀಡಿದರು. ಪೊಲೀಸ್ ಇಲಾಖೆಗೆ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಸೇರ್ಪಡೆಯಾಗಬೇಕು ಎಂಬ ಉದ್ದೇಶದಿಂದ, ಶೇ.70ರಷ್ಟು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತಿದೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು.
ಈ ನಿರ್ಧಾರದಿಂದ ರಾಜ್ಯದ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಲಭಿಸಲಿದ್ದು, ಪೊಲೀಸ್ ಇಲಾಖೆಯ ಕಾರ್ಯಕ್ಷಮತೆ ಮತ್ತಷ್ಟು ಬಲಪಡಿಸಲಿದೆ. ಶೀಘ್ರದಲ್ಲೇ ಸರ್ಕಾರದಿಂದ ಅಧಿಕೃತ ಆದೇಶ ಹಾಗೂ ಅಧಿಸೂಚನೆ ಹೊರಬರುವ ನಿರೀಕ್ಷೆಯಿದೆ.







