Home » ಬೀದರ ಜಿಲ್ಲೆ » ಭಾಲ್ಕಿ: ಚನ್ನಬಸವೇಶ್ವರ ಗುರುಕುಲದಲ್ಲಿ ಗೋಲ್ಡನ್ ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆ; ಜನವರಿಯಲ್ಲಿ 5 ದಿನ ಪರೀಕ್ಷೆ

ಭಾಲ್ಕಿ: ಚನ್ನಬಸವೇಶ್ವರ ಗುರುಕುಲದಲ್ಲಿ ಗೋಲ್ಡನ್ ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆ; ಜನವರಿಯಲ್ಲಿ 5 ದಿನ ಪರೀಕ್ಷೆ

ಭಾಲ್ಕಿ ತಾಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ ಗೋಲ್ಡನ್ ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆ ಯೋಜನೆಯನ್ನು ಮುಂದುವರಿಸಲಾಗಿದ್ದು, 2026–27ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕಾಗಿ ಜನವರಿ ತಿಂಗಳಲ್ಲಿ ಐದು ದಿನ ಪ್ರವೇಶ ಪರೀಕ್ಷೆಗಳನ್ನು ಆಯೋಜಿಸಲಾಗಿದೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.
ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಯ 25ನೇ ವರ್ಷದ ಆಚರಣೆಯ ಹಿನ್ನಲೆಯಲ್ಲಿ ಸುಮಾರು ಹತ್ತು ವರ್ಷಗಳ ಹಿಂದೆ ಗುರುಕುಲ ಗೋಲ್ಡನ್ ಸ್ಕಾಲರ್‌ಶಿಪ್ ಯೋಜನೆಯನ್ನು ಆರಂಭಿಸಲಾಗಿತ್ತು ಎಂದು ಹೇಳಿದರು.
ಮಕ್ಕಳು ಹಾಗೂ ಪಾಲಕರಿಂದ ಯೋಜನೆಗೆ ನಿರಂತರವಾಗಿ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಈ ಸ್ಕಾಲರ್‌ಶಿಪ್ ಯೋಜನೆಯನ್ನು ಮುಂದುವರಿಸಲು ಟ್ರಸ್ಟ್ ನಿರ್ಧಾರ ಕೈಗೊಂಡಿದೆ. ಈ ಯೋಜನೆ ವಿಶೇಷವಾಗಿ ಬಡವರು, ರೈತರು ಮತ್ತು ಕೂಲಿ ಕಾರ್ಮಿಕರ ಮಕ್ಕಳಿಗೆ ವರದಾನವಾಗಿ ಪರಿಣಮಿಸಿದೆ ಎಂದು ಅವರು ಹೇಳಿದರು.
ಪ್ರತಿ ವರ್ಷ ಸುಮಾರು ನೂರು ವಿದ್ಯಾರ್ಥಿಗಳು ಉಚಿತ ಶಿಕ್ಷಣದ ಸೌಲಭ್ಯ ಪಡೆದು, ನೀಟ್ ಹಾಗೂ ಐಐಟಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದು ಹೆಮ್ಮೆಯಿಂದ ತಿಳಿಸಿದರು.
ಉಚಿತ ಶಿಕ್ಷಣ ಹಾಗೂ ಶುಲ್ಕ ರಿಯಾಯಿತಿ
ಗುರುಕುಲ ಗೋಲ್ಡನ್ ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆಯಲ್ಲಿ ಉತ್ತಮ ರ‍್ಯಾಂಕ್ ಪಡೆದ ಮೊದಲ 25 ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಕಾಲ ಉಚಿತ ಪಿಯುಸಿ ಶಿಕ್ಷಣ, ವಸತಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಕೋಚಿಂಗ್ ನೀಡಲಾಗುವುದು.
ಇನ್ನುಳಿದ 75 ವಿದ್ಯಾರ್ಥಿಗಳಿಗೆ ಪಿಯುಸಿ ಶುಲ್ಕದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಡಾ. ಬಸವಲಿಂಗ ಪಟ್ಟದ್ದೇವರು ಸ್ಪಷ್ಟಪಡಿಸಿದರು.
ಜನವರಿಯಲ್ಲಿ ಐದು ದಿನ ಪ್ರವೇಶ ಪರೀಕ್ಷೆ
ಈ ಕುರಿತು ಮಾತನಾಡಿದ ಭಾಲ್ಕಿ ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಗಡಿಭಾಗದ ಬಡ ಹಾಗೂ ಪ್ರತಿಭಾವಂತ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಬಸವಲಿಂಗ ಪಟ್ಟದ್ದೇವರ ಮಾರ್ಗದರ್ಶನದಲ್ಲಿ ಗುರುಕುಲ ಸ್ಕಾಲರ್‌ಶಿಪ್ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
2026–27ನೇ ಸಾಲಿನ ಪಿಯುಸಿ ವಿಜ್ಞಾನ ಪ್ರವೇಶಕ್ಕಾಗಿ ಜನವರಿ 4, 10, 11, 18 ಮತ್ತು 25 ರಂದು ಚನ್ನಬಸವೇಶ್ವರ ಗುರುಕುಲದಲ್ಲಿ ಪ್ರವೇಶ ಪರೀಕ್ಷೆಗಳನ್ನು ಆಯೋಜಿಸಲಾಗಿದೆ.
ಪ್ರಸ್ತುತ ಎಸ್ಸೆಸ್ಸೆಲ್ಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕನ್ನಡ ಹಾಗೂ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.
ನೀಟ್–ಐಐಟಿಯಲ್ಲಿ ಸಾಧನೆ
ಚನ್ನಬಸವೇಶ್ವರ ಗುರುಕುಲವು ಪ್ರಕೃತಿ ಮಡಿಲಿನಲ್ಲಿ ಗುಣಾತ್ಮಕ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರಗಳಿಗೆ ಆದ್ಯತೆ ನೀಡುತ್ತಿದೆ. ಇದರ ಫಲವಾಗಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ಗುರುಕುಲದ ವಿದ್ಯಾರ್ಥಿಗಳು ನೀಟ್ ಮತ್ತು ಐಐಟಿ ಪರೀಕ್ಷೆಗಳಲ್ಲಿ ಉತ್ತಮ ರ‍್ಯಾಂಕ್ ಗಳಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಗೌರವಕ್ಕೂ ಪಾತ್ರರಾಗಿದ್ದರು ಎಂದು ಗುರುಬಸವ ಪಟ್ಟದ್ದೇವರು ಸ್ಮರಿಸಿದರು.
8 ಸಾವಿರ ವಿದ್ಯಾರ್ಥಿಗಳ ನೋಂದಣಿ
2026–27ನೇ ಸಾಲಿನ ಪಿಯುಸಿ ವಿಜ್ಞಾನ ಪ್ರವೇಶಕ್ಕಾಗಿ ಗೋಲ್ಡನ್ ಸ್ಕಾಲರ್‌ಶಿಪ್‌ಗೆ ಈಗಾಗಲೇ ರಾಜ್ಯ ಮತ್ತು ಹೊರ ರಾಜ್ಯಗಳಿಂದ 8,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಬಸವರಾಜ ಮೊಳಕೀರೆ ಮಾಹಿತಿ ನೀಡಿದರು.
2004ರಲ್ಲಿ ಪಿಯುಸಿ ವಿಭಾಗ ಆರಂಭಗೊಂಡಿದ್ದು, ಕಳೆದ 10 ವರ್ಷಗಳಿಂದ ಸ್ಕಾಲರ್‌ಶಿಪ್ ಯೋಜನೆಯನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಇದುವರೆಗೆ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಚಿತ ಶಿಕ್ಷಣ, ವಸತಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸೌಲಭ್ಯ ಪಡೆದುಕೊಂಡಿದ್ದಾರೆ ಎಂದು ಅವರು ಹೇಳಿದರು.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This