Home » ರಾಜ್ಯ » ಬ್ಯಾಲೆಟ್ ಪೇಪರ್ ಮೂಲಕ ಮತದಾನ: ರಾಜ್ಯ ಚುನಾವಣಾ ಆಯೋಗ

ಬ್ಯಾಲೆಟ್ ಪೇಪರ್ ಮೂಲಕ ಮತದಾನ: ರಾಜ್ಯ ಚುನಾವಣಾ ಆಯೋಗ

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ 5 ನಗರ ಪಾಲಿಕೆಗಳನ್ನು ಒಳಗೊಂಡಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮೇ ಅಥವಾ ಜೂನ್ ಅಂತ್ಯದೊಳಗೆ ಬ್ಯಾಲೆಟ್ ಪೇಪರ್ (ಮತಪತ್ರ) ಮೂಲಕ ನಡೆಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್. ಸಂಗ್ರೇಶಿ ತಿಳಿಸಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ 5 ನಗರ ಪಾಲಿಕೆಗಳ 369 ವಾರ್ಡ್‌ಗಳ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಇವಿಎಂ ಬದಲಾಗಿ ಬ್ಯಾಲೆಟ್ ಪೇಪರ್ ಮೂಲಕ ನಡೆಸಲು ಆಯೋಗ ತೀರ್ಮಾನಿಸಿದೆ ಎಂದು ಸ್ಪಷ್ಟಪಡಿಸಿದರು.
ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳು ಹಾಗೂ ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳ ಚುನಾವಣೆಯೂ ಮತಪತ್ರದ ಮೂಲಕವೇ ನಡೆಯಲಿದೆ ಎಂದು ಹೇಳಿದರು.
ಈ ನಿರ್ಧಾರಕ್ಕೆ ಕಾನೂನುಬದ್ಧ ಅಡಚಣೆ ಇಲ್ಲವೆಂದು ವಿವರಿಸಿದ ಆಯುಕ್ತರು, ಜಿಬಿಎ ಕಾಯ್ದೆಯಲ್ಲಿಯೇ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಅವಕಾಶವಿದೆ. ಕಾಯ್ದೆಯಲ್ಲಿ ಅವಕಾಶ ಇರುವ ಸಂದರ್ಭದಲ್ಲಿ ಅದನ್ನು ಬಳಸುವುದಕ್ಕೆ ಯಾವುದೇ ಅಡ್ಡಿಯಿಲ್ಲ ಎಂದು ತಿಳಿಸಿದರು.
ಇದೇ ವೇಳೆ, ಬ್ಯಾಲೆಟ್ ಪೇಪರ್ ಬಳಕೆಯನ್ನು ನಿಷೇಧಿಸುವಂತೆ ಸುಪ್ರೀಂ ಕೋರ್ಟ್‌ನ ಯಾವುದೇ ತೀರ್ಪು ಅಥವಾ ದೇಶದ ಯಾವುದೇ ಕಾನೂನಿನಲ್ಲೂ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟಪಡಿಸಿದರು. ಎಲ್ಲವೂ ನಿಯಮಗಳ ಚೌಕಟ್ಟಿನೊಳಗೆ ತೆಗೆದುಕೊಂಡ ನಿರ್ಧಾರವಾಗಿದ್ದು, ಚುನಾವಣಾ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಲಿದೆ ಎಂದು ಭರವಸೆ ನೀಡಿದರು.
ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಆಕ್ಷೇಪಣೆ ಮತ್ತು ಸಲಹೆಗಳನ್ನು ಸ್ವೀಕರಿಸಲಾಗುವುದು. ಅವುಗಳ ಪರಿಶೀಲನೆಯ ನಂತರ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ಅವರು ತಿಳಿಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯೊಂದಿಗೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆ ಇದೆ.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This