ಬೆಂಗಳೂರು: ಬೀದರ್ ಜಿಲ್ಲೆಯಲ್ಲಿ ಮಾರ್ಚ್ ತಿಂಗಳಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)ದ 40ನೇ ರಾಜ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ವಿಧಾನಸೌಧದಲ್ಲಿ ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಅರಣ್ಯ ಸಚಿವ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರು, ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾದ ಈಶ್ವರ ಬಿ. ಖಂಡ್ರೆ, ಹಾಗೂ ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳಿಗೆ ಸಮ್ಮೇಳನದಲ್ಲಿ ಭಾಗವಹಿಸುವಂತೆ ಅಧಿಕೃತ ಆಹ್ವಾನ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷ ಎಚ್.ಬಿ. ಮದನಗೌಡ, ಪ್ರಧಾನ ಕಾರ್ಯದರ್ಶಿ ಲೋಕೇಶ್, ಕಾರ್ಯದರ್ಶಿ ಸೋಮಶೇಖರ ಕೆರಗೋಡು, ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ್ ದೇವಪ್ಪ, ಬಾಬುವಾಲಿ, ಶಿವಕುಮಾರಸ್ವಾಮಿ, ಪೃಥ್ವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಅರ್ಥಪೂರ್ಣ ಸಮ್ಮೇಳನಕ್ಕೆ ಕರೆ
ನಂತರ ವಿಕಾಸಸೌಧದಲ್ಲಿನ ತಮ್ಮ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಚಿವ ಈಶ್ವರ ಖಂಡ್ರೆ ಅವರು ಸಮ್ಮೇಳನದ ಲಾಂಛನವನ್ನು ಮತ್ತೊಮ್ಮೆ ಬಿಡುಗಡೆ ಮಾಡಿ, ಬೀದರ್ ಜಿಲ್ಲಾ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಹಾಗೂ ಸಿದ್ದೂಪಾಟೀಲ್ ಅವರ ಸಮ್ಮುಖದಲ್ಲಿ ರಾಜ್ಯ ಸಂಘಕ್ಕೆ ಹಸ್ತಾಂತರಿಸಿದರು.
ಎರಡು ದಶಕಗಳ ಬಳಿಕ ಬೀದರ್‌ನಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನವನ್ನು ಅರ್ಥಪೂರ್ಣ, ವಿಚಾರಪೂರ್ಣ ಮತ್ತು ಸ್ಮರಣೀಯ ಸಮ್ಮೇಳನವಾಗಿಸಲು ಸಂಘದ ಪದಾಧಿಕಾರಿಗಳು ಶ್ರಮಿಸಬೇಕು ಎಂದು ಸಚಿವ ಈಶ್ವರ ಖಂಡ್ರೆ ಕರೆ ನೀಡಿದರು.
ಈ ಸಮಾರಂಭದಲ್ಲಿ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ್, ಕಾರ್ಯದರ್ಶಿ ಸೋಮಶೇಖರ ಕೆರಗೋಡು, ಬೀದರ್ ಜಿಲ್ಲಾ ಅಧ್ಯಕ್ಷ ಆನಂದ್ ದೇವಪ್ಪ, ಬಾಬುವಾಲಿ, ಶಿವಕುಮಾರಸ್ವಾಮಿ, ದೀಪಕ್ ವಾಲಿ, ಮಾಳಪ್ಪ ಅಡಸಾರೆ, ಸಿದ್ರಾಮಯ್ಯ ಸ್ವಾಮಿ, ಪೃಥ್ವಿರಾಜ್, ಬಸವರಾಜ ಪವಾರ್, ವಿಜಯಕುಮಾರ ಅಷ್ಟುರೆ ಸೇರಿದಂತೆ ಅನೇಕ ಪತ್ರಕರ್ತರು ಪಾಲ್ಗೊಂಡಿದ್ದರು.







