ಔರಾದ್, ಜನವರಿ 29: ಅಲೆಮಾರಿ ಹಾಗೂ ಅರೆಅಲೆಮಾರಿ ಜನಾಂಗದವರಿಗೆ ಎರಡು ಎಕರೆ ಜಾಗ ಮಂಜೂರು ಮಾಡಬೇಕೆಂಬ ಬಹು ವರ್ಷಗಳ ಬೇಡಿಕೆಯನ್ನು ಮುಂದಿಟ್ಟುಕೊಂಡು ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಔರಾದ್ ಪಟ್ಟಣದ ತಹಸೀಲ್ ಕಚೇರಿ ಮುಂಭಾಗ ಕಳೆದ 11 ದಿನಗಳಿಂದ ನಡೆಯುತ್ತಿದ್ದ ಅಹೋರಾತ್ರಿ ಧರಣಿ ಗುರುವಾರ ರಾತ್ರಿ ಶಾಂತಿಯುತವಾಗಿ ಅಂತ್ಯಗೊಂಡಿದೆ.
ಧರಣಿಯಲ್ಲಿ ಭಾಗವಹಿಸಿದ್ದ ಸಮುದಾಯದವರು “ನಮಗೆ ನೆಲೆ, ಮನೆ ಮತ್ತು ಬದುಕಿನ ಭದ್ರತೆ ಅಗತ್ಯ” ಎಂದು ಆಗ್ರಹಿಸುತ್ತಾ ನಿರಂತರ ಹೋರಾಟ ನಡೆಸಿದ್ದರು. ಈ ಹೋರಾಟಕ್ಕೆ ವಿವಿಧ ಸಂಘಟನೆಗಳು, ಸಾಮಾಜಿಕ ಹೋರಾಟಗಾರರು ಬೆಂಬಲ ವ್ಯಕ್ತಪಡಿಸಿದ್ದರು.
ಗುರುವಾರ ರಾತ್ರಿ ಸುಮಾರು 8.30ರ ವೇಳೆಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಧರಣಿ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಚರ್ಚೆ ನಡೆಸಿದರು. ಈ ವೇಳೆ ಅಧಿಕೃತವಾಗಿ ಎರಡು ಎಕರೆ ಜಾಗವನ್ನು ಅಲೆಮಾರಿ ಹಾಗೂ ಅರೆಅಲೆಮಾರಿ ಜನಾಂಗದವರಿಗೆ ಮಂಜೂರು ಮಾಡಲಾಗಿದೆ ಎಂದು ಘೋಷಿಸಿದರು.
ಅಷ್ಟೇ ಅಲ್ಲದೆ ಮುಂದಿನ ಆರು ತಿಂಗಳೊಳಗೆ ಜಿ ಪ್ಲಸ್-3 ಯೋಜನೆಯಡಿ ಮನೆ ನಿರ್ಮಾಣ ಕಾರ್ಯ ಆರಂಭಿಸಲಾಗುವುದು. ಜೊತೆಗೆ ರಸ್ತೆ, ನೀರು, ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಜಿಲ್ಲಾಧಿಕಾರಿಗಳು ಈ ಸಂಬಂಧ ಹಿಂಬರಹ ಪತ್ರವನ್ನು ನೀಡಿದ ಬಳಿಕ ಪ್ರತಿಭಟನಾಕಾರರು ತಮ್ಮ ಧರಣಿಯನ್ನು ಹಿಂಪಡೆದಿದ್ದಾರೆ.
ಈ ಸಂದರ್ಭದಲ್ಲಿ ಬೀದರ್ ಸಹಾಯಕ ಆಯುಕ್ತ ಮುಹಮ್ಮದ್ ಶಕೀಲ್, ತಹಸೀಲ್ದಾರ್ ಮಹೇಶ್ ಪಾಟೀಲ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ರಾಹುಲ್ ಖಂದಾರೆ, ಸುಭಾಷ್ ಲಾಧಾ, ಪ್ರವೀಣ ಕಾರಂಜೆ, ಸಂತೋಷ ಸಿಂಧೆ, ಸಂತೋಷ ಸೂರ್ಯವಂಶಿ, ಅನಿಲ ಭುಜಂಗೆ, ಶಿಧಾರ್ಥ್ ಭೋಸಲೇ ಸೇರಿದಂತೆ ಅನೇಕ ಮುಖಂಡರು ಹಾಗೂ ಸಮುದಾಯದ ಸದಸ್ಯರು ಭಾಗವಹಿಸಿದ್ದರು.
ಧರಣಿ ಅಂತ್ಯಗೊಂಡರೂ, ನೀಡಿದ ಭರವಸೆಗಳು ಶೀಘ್ರ ಜಾರಿಗೆ ಬರಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.







