ಬೆಂಗಳೂರು/ಹಾವೇರಿ
ರಾಜ್ಯದ ಕಂದಾಯ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಸುಮಾರು ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮವು ಫೆಬ್ರವರಿ 13ರಂದು ಹಾವೇರಿಯಲ್ಲಿ ನಡೆಯಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಈ ಸಂಬಂಧ ವಿಕಾಸಸೌಧದಲ್ಲಿ ಗುರುವಾರ ವರ್ಚುವಲ್ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಅಗತ್ಯವಿರುವ ಎಲ್ಲ ದಾಖಲೆಗಳನ್ನು ಮುಂದಿನ ವಾರದೊಳಗೆ ಸಂಪೂರ್ಣವಾಗಿ ಸಿದ್ಧಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ಸಚಿವರು ಮಾತನಾಡುತ್ತಾ, ರಾಜ್ಯದಲ್ಲಿರುವ ಹಾಡಿ, ಹಟ್ಟಿ, ತಾಂಡಾ ವ್ಯಾಪ್ತಿಯಲ್ಲಿ ವಾಸಿಸುವ ಅನೇಕ ನಿವಾಸಿಗಳು ಇದುವರೆಗೂ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಉದ್ದೇಶದಿಂದ, ಇಂತಹ ವಸತಿ ಪ್ರದೇಶಗಳಿಗೆ ಕಂದಾಯ ಗ್ರಾಮಗಳ ಸ್ಥಾನಮಾನ ನೀಡುವಂತೆ 2017ರಲ್ಲಿ ಕಾನೂನು ತಿದ್ದುಪಡಿ ಮಾಡಲಾಗಿದೆ ಎಂದು ಹೇಳಿದರು.
ಈ ತಿದ್ದುಪಡಿಯ ಅನ್ವಯ, ಅರ್ಹ ಫಲಾನುಭವಿಗಳಿಗೆ ಭೂಮಿ ಹಾಗೂ ವಸತಿಯ ಹಕ್ಕುಪತ್ರ ನೀಡಲು ಸರ್ಕಾರ ಬದ್ಧವಾಗಿದೆ. ಅದರ ಭಾಗವಾಗಿ ಮೊದಲ ಹಂತದಲ್ಲಿ ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿdಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಅವರು ತಿಳಿಸಿದರು.
ಪ್ರತಿ ಜಿಲ್ಲೆಯಲ್ಲಿ ಫಲಾನುಭವಿಗಳ ಪಟ್ಟಿ, ದಾಖಲೆ ಪರಿಶೀಲನೆ, ನಕ್ಷೆ ಸಿದ್ಧತೆ ಹಾಗೂ ಇತರೆ ಕಾನೂನು ಪ್ರಕ್ರಿಯೆಗಳಲ್ಲಿ ಯಾವುದೇ ವಿಳಂಬವಾಗಬಾರದು ಎಂದು ಸೂಚಿಸಿದ ಸಚಿವರು, ಕಾರ್ಯಕ್ರಮ ಯಶಸ್ವಿಗೆ ಜಿಲ್ಲಾಡಳಿತಗಳು ಪೂರ್ಣ ಸಿದ್ಧತೆ ಕೈಗೊಳ್ಳಬೇಕು ಎಂದು ಹೇಳಿದರು.
ಈ ಸಭೆಯಲ್ಲಿ ಹಿರಿಯ ಅಧಿಕಾರಿಗಳು, ಕಂದಾಯ ಇಲಾಖೆ ಕಾರ್ಯದರ್ಶಿಗಳು ಹಾಗೂ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಭಾಗವಹಿಸಿದ್ದರು.







