ರಾಯಚೂರು: ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಫೆಬ್ರವರಿ 6ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ನಗರದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದೆ. ರಾಯಚೂರು ಜಿಲ್ಲಾ ಉತ್ಸವ–2026ರ ಹಿನ್ನೆಲೆಯಲ್ಲಿ ಸಂಜೀವಿನಿ ಕೆ.ಎಸ್.ಆರ್.ಎಲ್.ಪಿ.ಎಸ್ ಹಾಗೂ ಡಿಡಿಯು–ಜಿಕೆವೈ ಯೋಜನೆಯಡಿ ಈ ಮೇಳವನ್ನು ನಡೆಸಲಾಗುತ್ತಿದೆ.
ಜನವರಿ 30ರ ಮಾಹಿತಿಯಂತೆ ಉದ್ಯೋಗ ಮೇಳಕ್ಕೆ ಈಗಾಗಲೇ 4,967 ಅಭ್ಯರ್ಥಿಗಳು ಆನ್ಲೈನ್ ಮೂಲಕ ನೋಂದಣಿ ಮಾಡಿಸಿಕೊಂಡಿದ್ದಾರೆ. ಮೇಳದ ಯಶಸ್ವಿ ಆಯೋಜನೆಗಾಗಿ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ, ಸಾಮಾನ್ಯ ಪದವಿ, ಡಿಪ್ಲೊಮಾ, ಐಟಿಐ, ಇಂಜಿನಿಯರಿಂಗ್, ನರ್ಸಿಂಗ್ ಸೇರಿದಂತೆ ವಿವಿಧ ಅರೆ ವೈದ್ಯಕೀಯ ಕೋರ್ಸ್ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಗುರಿ ಹೊಂದಲಾಗಿದೆ.
ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಸ್ಥಳೀಯವಾಗಿ ಸುಮಾರು 75ಕ್ಕೂ ಹೆಚ್ಚು ಪ್ರತಿಷ್ಠಿತ ಬೃಹತ್, ಮಧ್ಯಮ ಹಾಗೂ ಸಣ್ಣ ಕಂಪನಿಗಳು ಭಾಗವಹಿಸಲಿದ್ದು, ತಮ್ಮಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ. ಆಯ್ಕೆಯಾದವರಿಗೆ ಸ್ಥಳದಲ್ಲಿಯೇ ಆಫರ್ ಲೆಟರ್ ನೀಡಲಾಗುತ್ತದೆ.
ಉದ್ಯೋಗಾಕಾಂಕ್ಷಿಗಳು https://udyogamela.ksdckarnataka.com ಜಾಲತಾಣದಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಉದ್ಯೋಗದಾತ ಕಂಪನಿಗಳು https://employer.ksdckarnataka.com/login ನಲ್ಲಿ ಖಾಲಿ ಹುದ್ದೆಗಳ ವಿವರಗಳೊಂದಿಗೆ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ 9538753304, 7975618955, 7676999304, 9845339241 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.







