ಬೆಂಗಳೂರು:ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್ಗಳು, ಎಂಜಿನಿಯರಿಂಗ್ ಕಾಲೇಜುಗಳು ಹಾಗೂ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ (UVCE) ಖಾಲಿ ಇರುವ ಒಟ್ಟು 2000 ಬೋಧಕ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಷರತ್ತುಬದ್ದ ಅನುಮತಿ ನೀಡಿದೆ.
ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಘೋಷಿಸಿದಂತೆ,
ಪ್ರಥಮ ದರ್ಜೆ ಕಾಲೇಜುಗಳಲ್ಲಿ 825 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು,
ಪಾಲಿಟೆಕ್ನಿಕ್ಗಳಲ್ಲಿ 941 ಉಪನ್ಯಾಸಕರ ಹುದ್ದೆಗಳು,
ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಿಗೆ 186 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು,
ಯುವಿಸಿಇಯಲ್ಲಿ 47 ಬೋಧಕ ಹುದ್ದೆಗಳು
ಭರ್ತಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಉನ್ನತ ಶಿಕ್ಷಣ ಇಲಾಖೆಗೆ ಸಲ್ಲಿಸಿದ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯ ಸಲಹೆಗಳ ಆಧಾರದಲ್ಲಿ ಪರಿಶೀಲಿಸಿ, ನೇರ ನೇಮಕಾತಿ ಮೂಲಕ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಲಾಗಿದೆ. ಈ ಕುರಿತು ಇಲಾಖೆಯ ಉಪ ಕಾರ್ಯದರ್ಶಿಗಳು ಬುಧವಾರ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಹುದ್ದೆಗಳ ಭರ್ತಿ ಪ್ರಕ್ರಿಯೆ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ, ಅಗತ್ಯ ವಿದ್ಯಾರ್ಹತೆ ಹಾಗೂ ನಿಗದಿತ ನೇಮಕಾತಿ ವಿಧಾನವನ್ನು ಅನುಸರಿಸಿ ನಡೆಯಬೇಕು ಎಂದು ಸೂಚಿಸಲಾಗಿದೆ. ಜೊತೆಗೆ ಕಲ್ಯಾಣ ಕರ್ನಾಟಕ ವೃಂದಕ್ಕೆ ಮೀಸಲಿರುವ ಹುದ್ದೆಗಳನ್ನು ನಿಯಮಾನುಸಾರ ವರ್ಗೀಕರಿಸಿ ನೇಮಕಾತಿ ನಡೆಸಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಇನ್ನು ಯುವಿಸಿಇಯ 47 ಹುದ್ದೆಗಳ ಭರ್ತಿಗೆ ಮುನ್ನ, ವಿಶ್ವವಿದ್ಯಾಲಯದಲ್ಲಿ ಈಗಾಗಲೇ ಖಾಲಿ ಇರುವ 72 ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಗತ್ಯ ದಾಖಲೆಗಳನ್ನು ಸರ್ಕಾರಕ್ಕೆ ಸಲ್ಲಿಸಬೇಕು. ನಂತರ ಸರ್ಕಾರದ ಅಂತಿಮ ಅನುಮೋದನೆ ಪಡೆದು ನೇಮಕಾತಿ ಪ್ರಕ್ರಿಯೆ ಕೈಗೊಳ್ಳಬೇಕೆಂದು ಷರತ್ತು ವಿಧಿಸಲಾಗಿದೆ.







